
ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ತಿಂಗಳಿನಿಂದ ಸಿಎಂ ಕುರ್ಚಿ ಬದಲಾವಣೆ ಕುರಿತು ನಡೆಯುತ್ತಿದ್ದ ಚರ್ಚೆಗೆ ಇದೀಗ ಮಹತ್ವದ ತಿರುವು ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣಗಳ ನಡುವಿನ ಶೀತಲ ಸಮರಕ್ಕೆ ಪೂರ್ಣವಿರಾಮ ಬೀಳುವ ಸಾಧ್ಯತೆ ಹೆಚ್ಚಾಗಿದೆ.
ಈ ರಾಜಕೀಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ. ದೆಹಲಿಯಲ್ಲಿ ಖರ್ಗೆ ಅವರನ್ನು ಭೇಟಿ ಮಾಡಿದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯದ ಒಳಗಂಟುಗಳಿಂದ ಪಕ್ಷದ ಇಮೇಜ್‌ಗೆ ಹಿನ್ನಡೆಯಾಗುತ್ತಿದೆ ಎಂಬುದನ್ನು ವಿವರಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಖರ್ಗೆ ಅವರು “ನಾವು ಒಂದು ನಿರ್ಧಾರಕ್ಕೆ ಬಂದಿದ್ದೇವೆ” ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮತ್ತು ಸಂಚಲನ ಮೂಡಿಸಿದೆ. ಈ ಹೇಳಿಕೆಯ ನಂತರ ಕಾಂಗ್ರೆಸ್ ವಲಯದಲ್ಲಿ ಸಿಎಂ ಸ್ಥಾನ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿವೆ.ಇನ್ನು ಮುಂದೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಮುಂದುವರೆಯಲಿದೆಯೇ ಅಥವಾ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಪದ ಸಿಗಲಿದೆಯೇ ಎಂಬ ಪ್ರಶ್ನೆಗೆ ಕೆಲವೇ ದಿನಗಳಲ್ಲಿ ಅಧಿಕೃತ ಉತ್ತರ ಸಿಗುವ ಸಾಧ್ಯತೆ ಇದೆ. ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ರಾಜಕೀಯ ವಲಯದಲ್ಲಿ ಹೇಳಲಾಗುತ್ತಿದೆ.










